‘intended purpose’ ನ ಪರಿಧಿಯ ಆಚೆ

 

Image

ಪ್ರತಿಯೊಂದು ವಸ್ತುವೂ ‘intended purpose’ ನ ಪರಿಧಿಯ ಆಚೆ ಉಪಯೋಗಕ್ಕೆ ಬರುತ್ತದೆ. ಉದಾಹರಣೆಗಳು ಹೇರಳ, ಆದರೆ ನಾನಿಲ್ಲಿ ತೋರಿಸ ಹೊರಟಿರುವುದು ಚಾಪೆಯ ಮತ್ತೊಂದು ಉಪಯೋಗದ ಬಗ್ಗೆ.

ಪವಿತ್ರ ಹಜ್ ಯಾತ್ರೆಗೆ ಹೊರಟ ಸಂಬಂಧಿಗಳನ್ನು ಬೀಳ್ಕೊಡಲು ರೈಲು ನಿಲ್ದಾಣಕ್ಕೋ, ಬಸ್ ನಿಲ್ದಾಣಕ್ಕೋ ಬಂದ ಜನರಿಗೆ ಮಳೆಯ ಸ್ವಾಗತ ಸಿಕ್ಕಿದಾಗ ಕೊಡೆಯ ಬದಲಿಗೆ ಸಿಕ್ಕಿದ್ದು ನಮ್ಮ ಅದೇ age old ಚಾಪೆ. ಈ ಚಿತ್ರ ಅರಬ್ ನ್ಯೂಸ್ ಪತ್ರಿಕೆಯಲ್ಲಿ ಸಿಕ್ಕಿತು, ಅದರ ಜಾಡನ್ನು ಹಿಡಿದಾಗ ‘ರೈಟರ್ಸ್’ ಸುದ್ದಿ ಸಂಸ್ಥೆಯ ಛಾಯಾ ಗ್ರಾಹಕ ಕ್ಲಿಕ್ಕಿಸಿದ್ದು ಎಂದು ಅಂತರ್ಜಾಲದಲ್ಲಿ ಕಾಣ ಸಿಕ್ಕಿತು.

ಈ ಸಲ ಭಾರತಕ್ಕೆ ಬಂದಿದ್ದಾಗ ಕಂಡ ದೃಶ್ಯ. ಕಾಸರಗೋಡಿನ ಸಮೀಪದ ಕುಂಬ್ಳೆ ಕಡೆ ಪ್ರಯಾಣ ಹೋದಾಗ ಅಪರಾಹ್ನದ ನಮಾಜ್ ಸಮಯ. ಅಲ್ಲೇ ಇದ್ದ ಮಸ್ಜಿದ್ ನ ಆವರಣ ದೊಳಗೆ ಹೋದಾಗ disabled ವ್ಯಕ್ತಿಯೊಬ್ಬ ಧನ ಸಹಾಯಕ್ಕಾಗಿ ನಿಂತಿದ್ದ. ತನ್ನಲ್ಲಿದ್ದ ಛತ್ರಿ ಯನ್ನು ಬಿಚ್ಚಿ ಉಲ್ಟಾ ಮಾಡಿ ತನಗೆ ಸಿಕ್ಕ ಹಣ ಶೇಖರವಾಗುವಂತೆ ಹಿಡಿದಿದ್ದ. ಮಳೆ ಹನಿಯನ್ನು ತಡೆಯಲು ಉಪಯೋಗಿಸುವ ಕೊಡೆ ಹಣ ಸಂಗ್ರಹಿಸಲು ಉಪಯೋಗಕ್ಕೆ ಬಂತು. ಸ್ವಲ್ಪ ದೂರ ನಿಂತು ಈ ಚಿತ್ರ ತೆಗೆಯೋಣ ಎನ್ನುವಾಗ ದರಿದ್ರದ ನನ್ನ i phone ಚಾರ್ಜ್ ಇಲ್ಲದೆ ಸತ್ತಿತ್ತು.

ಅಪರೂಪದ ದೇವಾಲಯ

ಕೇಂದ್ರದ ಮಾಜಿ ಸಚಿವ ಶಶಿ ತರೂರ್ ತಮ್ಮ ‘ಟ್ವಿಟ್ಟರ್’ ಪುಟದಲ್ಲಿ ಕೇರಳದ ದೇವಾಲಯವೊಂದರ ಸ್ವಾರಸ್ಯದ ಬಗ್ಗೆ ಬರೆದಿದ್ದರು. ಅವರು ನೋಡಿದ ದೇವಾಲಯದಲ್ಲಿ ಗಣೇಶ ಮತ್ತು ಶ್ರೀ ಕೃಷ್ಣರ ವಿಗ್ರಹಗಳು ಒಟ್ಟಿಗೆ ಇದ್ದು, ಹೀಗೆ ಈ ಎರಡು ದೇವರುಗಳು ಜೊತೆಯಾಗಿ ಇರುವ ದೇವಾಲಯ ಬೇರೆಯೂ ಇದೆಯೇ ಎಂದು ಕೇಳಿದ್ದರು.

ಕೇರಳದ ಕೋಟ್ಟಯಂ ಜಿಲ್ಲೆಯ ಕುರುಪ್ಪಂತರ ಸ್ಥಳದಲ್ಲಿ ಇರುವ ಈ ಅಪರೂಪದ  ದೇವಾಲಯದ ಬಗ್ಗೆ ನನಗೂ ಆಸಕ್ತಿ ಹುಟ್ಟಿತು ಮಧ್ಯ ರಾತ್ರಿ ಯಲ್ಲಿ. ನೆಟ್ ಬಂಟ ಗೂಗ್ಲ್ ನಮಗಾಗಿ ಮತ್ತು ಇಂಥ ಕುತೂಹಲ ತಣಿಸಲು ತಾನೇ ಇರುವುದು? ಕೆಲವೇ ಸೆಕೆಂಡುಗಳಲ್ಲಿ ದೇವಾಲಯ ತೆರೆದು ಕೊಂಡಿತು. “ಮಳ್ಳಿಯೂರ್ ಶ್ರೀ ಗಣೇಶಾಯ ನಮಃ, ಅವಿಘನಮಸ್ತು ಶ್ರೀ ಕೃಷ್ಣಾಯ ನಮಃ” ಎನ್ನುವ ಬ್ಯಾನರ್ ಹೊತ್ತ ಈ ವೆಬ್ ತಾಣದಲ್ಲಿ ಸುಂದರ ಮಂದಿರದ ಚಿತ್ರವಿದೆ. ಈ ಮಂದಿರದಲ್ಲಿ ಶ್ರೀ ಗಣೇಶನ ತೊಡೆಯ ಮೇಲೆ ಶ್ರೀ ಕೃಷ್ಣ ಆಸೀನನಾಗಿದ್ದಾನೆ. ಈ ದೇವಾಲಯದ ವೆಬ್ ತಾಣ ದ ವಿಳಾಸ,

http://www.malliyoortemple.com/docs/Main.asp   

ಮತ್ತೊಂದು ವಿಶೇಷ. ಕೇರಳದ ಶಬರಿ ಮಲೆ ಮೇಲೆ ಇರುವ ಅಯ್ಯಪ್ಪ ಸ್ವಾಮೀ ದೇವಸ್ಥಾನಕ್ಕೆ ಹೋಗೋ ಮೊದಲು ಬೆಟ್ಟದ ಅಡಿಯಲ್ಲಿರುವ ವಾವರ್ ಎನ್ನುವ ಸೂಫಿ ಸಂತರ ಸಮಾಧಿಗೆ ಪೂಜೆ ಸಲ್ಲಿಸಿಯೇ ಅಯ್ಯಪ್ಪನಲ್ಲಿಗೆ ಹೋಗಬೇಕಂತೆ. ವಾವರ್ ಎನ್ನುವ ಮುಸ್ಲಿಂ ಯೋಧ ಅಸುರ ಮಹಿಷಿ ಯನ್ನು ಕೊಲ್ಲಲು ಸ್ವಾಮೀ ಅಯ್ಯಪ್ಪನಿಗೆ ಸಹಾಯ ಮಾಡಿದ ಕಾರಣಕ್ಕೆ ಅಯ್ಯಪ್ಪನ ಭಕ್ತರು ವಾವರ ರ ಮಸೀದಿಗೆ ಭೇಟಿ ನೀಡುತ್ತಾರೆ. ವಿವಿಧ ಮತಗಳ ಅನುಯಾಯಿಗಳೊಂದಿಗೆ ಸಾಮರಸ್ಯ ಸಾರುವ, ಹಳೆಕಾಲದ ಈ ತೆರನಾದ ನಂಬಿಕೆಗಳು ನಮ್ಮ ದೇಶದಲ್ಲಿ  ಹೇರಳ. ಅದಕ್ಕೊಂದು ಉದಾಹರಣೆಯಾಗಿ ನಮಗೆ ಕಾಣಲು ಸಿಗುತ್ತದೆ ಅಯ್ಯಪ್ಪ ಸ್ವಾಮಿಯ ಜಾತ್ರೆ.

ಭಾರತದ ವಿಜಯ

ಕೊನೆಗೂ ಬಂತು ಆ ದಿನ. ಆಂಗ್ಲ ಭಾಷೆಯಲ್ಲಿ D-Day. ತಮಗೆ ನಿರಾಸೆಯಾಗದಿರಲಿ ಎಂದು ಎರಡೂ ಕಡೆಯವರು ಆಶಿಸಿದ, ಬೇಡಿಕೊಂಡ, ಹರಕೆ ಹೊತ್ತು ಕೊಂಡ ದಿನ. ನೂರಾರು ವರ್ಷಗಳ ವಿವಾದಕ್ಕೆ, ವಿಶಾಲವಾದ ಭೂಮಿಯ ಜೊತೆ ನಮ್ಮೆಲ್ಲರನ್ನೂ ಸೃಷ್ಟಿಸಿದ, ಮನುಷ್ಯರಂತೆ ಬದುಕು ಎಂದು ತಾಕೀತಿನೊಂದಿಗೆ ಕಳಿಸಿದ, ಎಲ್ಲರೂ ಆರಾಧಿಸುವ ಪರಮಾತ್ಮನಿಗೆ  ಮಂದಿರವೋ ಮಸೀದಿಯೋ ಎನ್ನುವ ತಕಾರಾರಿಗೆ ಸಿಕ್ಕಿತು ಮುಕ್ತಿ. ಅದೂ ಸಂಕೀರ್ಣಮಯ ಮುಕ್ತಿ. ಸಂಕೀರ್ಣ ಸಮಸ್ಯೆಗೊಂದು ಅಷ್ಟೇ ಸಂಕೀರ್ಣವಾದ ಪರಿಹಾರ. ಅಯೋಧ್ಯೆ, ದೇಶದ ಜನರನ್ನು ಬೇರ್ಪಡಿಸಿದ್ದು ಮಾತ್ರವಲ್ಲ ದೇಶವಾಸಿಗಳು ತಮ್ಮ ಸಮಯ, ಶ್ರಮ, ಸಂಪತ್ತು ಈ ವಿವಾದದ ಹಿಂದೆ ಹೂಡಿ, ಕಚ್ಚಾಡಿ, ಬಡಿದಾಡಿ “

ವಸುಧೈವ ಕುಟುಂಬಕಂ” ಎಂಬುದು ಪುಸ್ತಕದ ಬದನೇಕಾಯಿ ಮಾತ್ರ ಎಂದು ಜಗತ್ತಿಗೆ ಸಾರಿದ ಸಮಸ್ಯೆ. ಬದುಕು, ಬದುಕಲು ಬಿಡು (ಜಿಯೋ ಔರ್ ಜೀನೇದೋ) ಎನ್ನುವ ಸಮೀಕರಣಕ್ಕೆ ಒಲ್ಲೆ ಎಂದು ಪಟ್ಟು ಹಿಡಿದ ವಿವಾದ. ಮೂರು ನ್ಯಾಯಾಧೀಶರುಗಳ ಪೀಠ ಕೊನೆಗೂ ಕೊಟ್ಟಿತು ತೀರ್ಪು, ಎರಡೆಕರೆ ೭೦ ಗುಂಟೆ ಮೂರುಭಾಗ ಮಾಡಿಕೊಂಡು ಭಜನೆ, ಹರಕೆ, ಏಕದೇವೋಪಾಸನೆ ಮಾಡಿಕೊಳ್ಳಿ ಎಂದು. ಆದರೆ ಈ ಗಲಾಟೆಯಲ್ಲಿ ರಾಮ ಮತ್ತು ರಹೀಮರು ನಿಮ್ಮ ಭಜನೆಯೂ ಬೇಡ, ಭಕ್ತಿಯೂ ಬೇಡ ಎಂದು ಸದ್ದಿಲ್ಲದೇ ಕಾಲು ಕಿತ್ತಿದ್ದು ಮಾತ್ರ ಯಾರೂ ಗಮನಿಸಲೇ ಇಲ್ಲ.

ಭಾರತ ಜಾತ್ಯಾತೀತ ರಾಷ್ಟ್ರ. ಆ ಹೆಗ್ಗಳಿಕೆಗೆ ನ್ಯಾಯವೆಸಗಲು ಹೆಣಗಿದ ತೀರ್ಪು ಇದು. ಇದರಲ್ಲಿ ಯಾರಿಗೂ ವಿಜಯವಿಲ್ಲ. ಆದರೆ ವಿಜಯ ಮಾಲೆ ತಾಯಿ ಭಾರತಿಗೆ ಎಂದು ಸಮಾಧಾನ. ಆದರೂ ಕೆಲವು ಕಿಡಿ ಗೇಡಿಗಳು ಸರಕಾರದ ಕಟ್ಟುನಿಟ್ಟಾದ ನಿರ್ದೇಶನದ ನಡುವೆಯೂ “V” ಪ್ರದರ್ಶಿಸುತ್ತಾ ಏನೋ ಸಾಧಿಸಿದವರಂತೆ ಫೋಸ್ ಕೊಟ್ಟರು. ದೇವರ ಹೆಸರಿನಲ್ಲಿ ರಾಜಕಾರಣ ಮಾಡಿ ಹೊಟ್ಟೆ ಹೊರೆದು ಕೊಳ್ಳುವವರಿಗೆ ಯಾವ ಸಂದಿಗ್ಧ ಪರಿಸ್ಥಿತಿಯೂ ವಿಜಯೋಲ್ಲಸವೇ. ಇಂದು ಬೆಳಗ್ಗಿನ ಹಲವು ಪತ್ರಿಕೆಗಳನ್ನು ನೋಡಿದ ನನಗೆ ಅನ್ನಿಸಿದ್ದು ಈಗಲೂ ಮಾಧ್ಯಮಕ್ಕೆ ಭಾರತೀಯರ ನಡುವೆ ಕಂದಕ ತೊಡುವುದೇ ಇವರ ಕಾಯಕ ಎಂದು. ಕರಾವಳಿಯ ಗುಡ್ಡದ ಮೇಲೊಂದರಿಂದ  ಪ್ರಕಾಶಿತವಾಗುವ ಪತ್ರಿಕೆಯಾಗಲಿ, ಸಮಸ್ತ ಕನ್ನಡಿಗರ ಹೆಮ್ಮೆ ಎಂದು ಘೋಷಣೆ ಹೊತ್ತ ಪತ್ರಿಕೆಯಾಗಲಿ ತಮ್ಮ screaming headlines ಮೂಲಕ ಒಂದು ಸಮಾಜಕ್ಕೆ ಸಂದ ವಿಜಯವೆಂದೇ ಪ್ರತಿಬಿಂಬಿಸಿದವು. ಈ ತೆರನಾದ, ಉದ್ರೇಕಿಸುವ ಪತ್ರಿಕೆಗಳ ತಲೆಬರಹಗಳನ್ನು ನಿರ್ಲಕ್ಷಿಸಿ ನ್ಯಾಯಾಲಯದ  ತೀರ್ಪನ್ನು ತಮ್ಮ ಸಂಸ್ಕೃತಿ ತಮ್ಮಿಂದ ಬಯಸುವ characteristic poise ಜೊತೆಗೆ “ಸಬರ್” (ಸಂಯಮ) ಅನ್ನು ಮೋಹಕವಾಗಿ ಪ್ರದರ್ಶಿಸುವ ಮೂಲಕ ಮುಸ್ಲಿಂ ಸಮಾಜದ ಬಂಧುಗಳು ಮಸೀದಿಗಿಂತ ದೇಶ ದೊಡ್ಡದು ಎಂದು ಜಗತ್ತಿಗೆ ತೋರಿಸಿಕೊಟ್ಟಿದ್ದು ಸಂತಸಕರ.

ದೇಶದ ಜನಸಂಖ್ಯೆಯ ಶೇಕಡಾ ೭೭ ಭಾಗ ಇಪ್ಪತ್ತಕ್ಕೂ ಕಡಿಮೆ ರೂಪಾಯಿಯ ಆದಾಯದ ಮೇಲೆ ಕಳೆಯುತ್ತಾರಂತೆ. ಒಪ್ಪೊತ್ತಿನ ಅನ್ನಕ್ಕಾಗಿ ಪರದಾಡುವವನಿಗೆ ತನ್ನ ಹಸಿದ ಹೊಟ್ಟೆಗೆ ಊಟ ಯಾವ ಕಡೆಯಿಂದ ಬರಬಹುದು ಎನ್ನುವ ಕಾತುರ, ನಿರೀಕ್ಷೆ.  ದೇಶವನ್ನು ಕಿತ್ತು ತಿನ್ನುತ್ತಿರುವ ಸಾಮಾಜಿಕ ಅಸಮಾನತೆ, ಹಸಿವು, ಲಂಚ, ಕೊಲೆ ಸುಲಿಗೆ ಬಗ್ಗೆ ಮೇಲಿನ ಸಮಸ್ಯೆಗಳಿಗೆ ತೋರಿಸಿದ ಕಾಳಜಿ, ಕಾತುರ ತೋರಿದ್ದಿದ್ದರೆ ಪಕ್ಕದ ಚೀನಾ ಅಥವಾ ಮಲೇಷ್ಯ ದಂಥ ದೇಶಗಳ ಪ್ರಗತಿ ಕಂಡು ಕರುಬುವ ಅವಶ್ಯಕತೆ ಇರಲಿಲ್ಲ. ಏನೇ ಆಗಲಿ ಈ ದೇಶದ ನೆಮ್ಮದಿ ಕೆಡಿಸಿದ್ದ ಸಮಸ್ಯೆಗೆ ಒಂದು ಪರಿಹಾರ ಬಂತು ಅಲ್ಲಾಹನ ಊರಿನಿಂದ (ಇಲಾಹಾಬಾದ್). ಈ ತೀರ್ಪು ದೇಶಕ್ಕೆ ಅವಶ್ಯ ಬೇಕಾದ ಶಾಂತಿ ನೆಮ್ಮದಿ ಕೊಡಿಸುವುದೋ ಎಂದು ನ್ಯಾಯ ಮೂರ್ತಿಗಳು ವಿಧಿಸಿದ ಮೂರು ತಿಂಗಳುಗಳ status quo ಉತ್ತರ ನೀಡಬಹುದು.            

ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನವನ್ನು ಕುತೂಹಲದಿಂದ ನೋಡುತ್ತಾ ಕೂತ ನಮಗೆ ಕಿಟಕಿಯ ಮೂಲಕ ಕಾಣಲು ಸಿಕ್ಕಿದ್ದು, ನನ್ನ ಎರದುಉವರೆ ವರ್ಷದ ಪುಟ್ಟ ಪೋರಿ ಕಾಲುದ್ದ ಮಾಡಿಕೊಂಡು ನನ್ನ ಮೇಜಿನ ಮೇಲಿನಿಂದ ಎಗರಿಸಿದ ಪುಟ್ಟ ಭಾರತದ ಧ್ವಜದಿಂದ ತನ್ನ ಮುಖಕ್ಕೆ ತಂಗಾಳಿಯನ್ನು ಬೀಸಿಕೊಳ್ಳುತ್ತಾ ಮಂದಿರ ಮಸೀದಿ ವಿವಾದ ನನಗೆ ನಗಣ್ಯ ಎನ್ನುವ ಥರ ಕೂತಿದ್ದಳು.

ಇಂದು ಬೆಳಿಗ್ಗೆ ನನ್ನ mobile ಗೆ ಬಂದ ಸಂದೇಶ; who are we Hindu or Muslim? When there is “Ali” in “Diwali” and “Ram” in “Ramadan” cant we help India to be united?

ಮುಸ್ಲಿಮರಲ್ಲಿ ಕಾಣಲು ಸಿಕ್ಕಿದ ಈ ಮೇಲಿನ ಉದಾತ್ತ, ಸಾಮರಸ್ಯದ ಭಾವನೆ ಸರ್ವರಲ್ಲೂ ಕಾಣುವಂತಾಗಲಿ ಎಂದು ಆಶಿಸುತ್ತಾ..

ಕಣ್ಣು ಹೋಗಿ, ಬಂತು ಕಾರಂಜಿ

ಈ ವಾರಾಂತ್ಯ ದ ಬಿಡುವಿನಲ್ಲಿ ಜೆಡ್ಡಾ ದ ಬಿಸಿಲ ಉರಿಯಿಂದ ರೋಸಿ ಹೋಗಿ ಎಲ್ಲಾದರೂ ತಂಪಾದ ಸ್ಥಳಕ್ಕೆ ಹೋಗಿ ಎರಡು ದಿನ ಕಳೆಯೋಣ ಎನ್ನಿಸಿತು. ಇಲ್ಲಿಂದ ಸುಮಾರು ೨೦೦ ಕಿ, ಮೀ ದೂರದಲ್ಲಿರುವ ತಾಯಿಫ್ ಒಂದು ಪ್ರವಾಸಿ ತಾಣ, ನಮ್ಮ ಕೆಮ್ಮಣ್ಣು ಗುಂಡಿಯ ಹಾಗೆ. ಮಳೆ, ಚಳಿ ಎಲ್ಲವೂ ಇದೆ ಇಲ್ಲಿ. ಆದರೆ ತಾಯಿಫ್ ಗೆ ಹಲವು ಸಾರಿ ಹೋಗಿದ್ದರಿಂದ ತಾಯಿಫ್ ನಂಥದ್ದೆ ಮತ್ತೊಂದು ತಾಣ “ಅಲ್-ಬಾಹ” ಎನ್ನುವ ಸ್ಥಳವಿದೆ ಎಂದು ಕೇಳಿದ್ದರಿಂದ ಅಲ್ಲಿಗೆ ಹೊರಟೆವು.

ಜೆಡ್ಡಾ ದಿಂದ ೪೦೦ ಕಿ ಮೀ ದೂರ ಅಲ್-ಬಾಹಾ. ಸಮುದ್ರ ಮಟ್ಟದಿಂದ ೨೦೦೦ ಮೀಟರ್ ಎತ್ತರದಲ್ಲಿರುವ ಈ ಚಿಕ್ಕ ನಗರ ಸುಡು ಬಿಸಿಲಿನಲ್ಲಿ ಬೆಂದ ಶರೀರಕ್ಕೆ ತಂಪನ್ನೀಯುವ ತಾಣ. ಸೌದಿಯಿಂದ ಮಾತ್ರವಲ್ಲದೆ ನೆರೆಯ ಕತಾರ್, ಒಮಾನ್, ಕುವೈತ್, ಬಹರೇನ್ ದೇಶಗಳಿಂದಲೂ ರಜೆಗೆ ಜನ ಇಲ್ಲಿಗೆ ಬರುತ್ತಾರೆ. ಜೆಡ್ಡಾ ಬಿಟ್ಟು ಸುಮಾರು ೨೦೦ ಕಿ ಮೀ ಕ್ರಮಿಸುತ್ತಿದ್ದಂತೆಯೇ ಭೌಗೋಳಿಕ ಬದಲಾವಣೆಗಳು ಗೋಚರಿಸ ತೊಡಗಿತು. ಅಗಾಧ ಸಾಗರದಂತೆ ರಸ್ತೆಯ ಎರಡೂ ಇಕ್ಕೆಲಗಳಲ್ಲಿ ಮರಳೋ ಮರಳು. ಮಟ್ಟಸವಾದ, ಸಮನಾದ ಮರುಭೂಮಿ, ಆಗಾಗ sand storm area, ಮತ್ತು ಒಂಟೆಗಳ ಪ್ರದೇಶ ಎಂದು ಸೂಚಿಸುವ ಫಲಕಗಳು. ಸೂರ್ಯನ ಅಟ್ಟಹಾಸಕ್ಕೆ ಬೆಚ್ಚಿದ ಮರಳು ರಾಶಿ ರಹದಾರಿಯ ಮೇಲೆ ಪಲಾಯಾನ ಮಾಡುವ ಸುಂದರ ದೃಶ್ಯ ನೋಡುತ್ತಾ ಹೋದಂತೆ ಸುಂದರ ಬೆಟ್ಟಗಳ ಶ್ರೇಣಿ ಗೋಚರಿಸಿತು. ಹವಾನಿಯಂತ್ರಿತ ಕಾರಿನೊಳಕ್ಕೆ ಕೂತು ನೋಡಲು ಬಹು ಸುಂದರ ದೃಶ್ಯ. ಆದರೆ ಬಟಾ ಬೆತ್ತಲೆಯಾದ (ಹಸಿರಿನ ಸುಳಿವೂ ಇಲ್ಲದ) ಬೆಟ್ಟಗಳನ್ನು ಕಾರಿನಿಂದ ಇಳಿದು ನೋಡಿದರೆ ನರಕ ಸದೃಶ ಅನುಭವ. ಅಂಥ ಬೇಗೆ. ಅಲ್-ಬಾಹಾ ಸಮೀಪಿಸುತ್ತಿದ್ದಂತೆ ಅಲ್ಲಲ್ಲಿ ಗಿಡ ಮರಗಳಿಂದ ತುಂಬಿದ ಚಿಕ್ಕ ಚಿಕ್ಕ ಬಯಲುಗಳು. ಈ ಪ್ರದೇಶದಲ್ಲಿ ಆಗಾಗ ಸಣ್ಣ ಪ್ರಮಾಣದಲ್ಲಿ ಮಳೆ ಆಗುವುದರಿಂದ ಹಸಿರು ತೊಡುವ ಭಾಗ್ಯ ಈ ಪ್ರದೇಶದ ನೆಲಕ್ಕೆ.

ಸಮುದ್ರ ಮಟ್ಟದಿಂದ ೨೦೦೦ ಮೀಟರ್ ಎತ್ತರದ ಲ್ಲಿರುವ ಅಲ್-ಬಾಹಾ ತಲುಪಲು ಮಾಡಬೇಕು ಶಿಖರಾರೋಹಣ. ಆಗುಂಬೆ, ಚಾರ್ಮಾಡಿ, ಬಾಬಾ ಬುಡನ್ ಗಿರಿಗಳನ್ನು ನೋಡಿದ್ದ ನನಗೆ ಈ ಬೆಟ್ಟ ಇನ್ನೂ ಎತ್ತರ ಎಂದು ತೋರಿತು. ಸುತ್ತಲೂ ಆವರಿಸಿ ಕೊಂಡ ಎತ್ತರದ ಬೆಟ್ಟಗಳಿಗೆ ರಸ್ತೆ ಜೋಡಣೆ ನಿಸ್ಸಂಶಯವಾಗಿಯೂ  engineering marvel ಎನ್ನಬಹುದು. two way ರಸ್ತೆಯಾದ್ದರಿಂದಲೂ, ರಸ್ತೆಗಳ ಮಧ್ಯೆ ಯಾವುದೇ barrier ಇಲ್ಲದಿದ್ದರಿಂದಲೂ ನಿಧಾನವಾಗಿ ಚಲಿಸಿ ಎನ್ನುವ ಫಲಕಗಳು, ಮಾತ್ರವಲ್ಲ ರಸ್ತೆಯ ಒಂದು ಕಡೆ ಬೆಟ್ಟದ ಆಸರೆ ಇದ್ದರೆ ಮತ್ತೊಂದು ಕಡೆ ವಾಹನ ಕೆಳಗುರುಳದಂತೆ ಭಾರೀ ಗಾತ್ರದ ಮೂರಡಿ ಎತ್ತರದ ಕಾಂಕ್ರೀಟ್ ಗೋಡೆಗಳು. ಹತ್ತಾರು ಬೆಟ್ಟಗಳನ್ನು ಬಳಸಿ ಹೋಗುವ ರಸ್ತೆಗೆ ೨೫ ಸುರಂಗಗಳು, ಅಲ್ಲಲ್ಲಿ ಕಣಿವೆಯಿಂದ ಕಣಿವೆಗೆ ಕಟ್ಟಿದ ಸೇತುವೆಗಳು. ತೈಲ ಸಂಪತ್ತು ತನ್ನ ಕಾರ್ಯ ಕ್ಷಮತೆಯನ್ನು ತೋರಿಸುವುದು ಇಂಥ ಸ್ಥಳಗಳಲ್ಲಿ.

ಅಲ್-ಬಾಹ ದಲ್ಲಿ ಸುತ್ತಾಡುತ್ತಿದ್ದಾಗ  “ಥೀ ಐನ್” ಎಂದು ಸಾರಿಗೆ ಫಲಕಗಳಲ್ಲಿ ಕಾಣುತ್ತಿತ್ತು. ಈ ಹೆಸರು ನನಗೆ ವಿಚಿತ್ರವಾಗಿ ಕಂಡಿತು. ಇದೂ ಯಾವುದಾದರೂ ಒಂದು ವಿಶೇಷವಾದ ಚಿಕ್ಕ ಪಟ್ಟಣವಿರಬೇಕು, ಅದರ ಬಗ್ಗೆ ಯಾರಿಗಾದರೂ ಕೇಳೋಣ ಅಂದರೆ ಇಲ್ಲಿ ಇಂಥ ವಿಷಯಗಳಲ್ಲಿ, ಅದರಲ್ಲೂ ಚಾರಿತ್ರಿಕ ವಿಷಯಗಳಲ್ಲಿ ಜನರಿಗೆ ಒಲವು, ಆಸಕ್ತಿ ಕಡಿಮೆಯೇ. ಸರಿ ಶುಕ್ರವಾರದ ಪ್ರಾರ್ಥನೆ ಮುಗಿಸಿದ ಕೂಡಲೇ ಹೊರಟೆವು ಜೆದ್ದಾದ ಕಡೆ ಹೋಗುವ ಸ್ಥಳಗಲ್ಲಿ ಇನ್ಯಾವುದಾದರೂ ಪ್ರೇಕ್ಷಣೀಯ ಸ್ಥಳವಿದ್ದರೆ ಕತ್ತಲಾಗುವ ಮುನ್ನ ನೋಡಿಕೊಂಡು ಜೆಡ್ಡಾ ಸೇರಬಹುದು ಎನ್ನುವ ಎಣಿಕೆಯೊಂದಿಗೆ. ಮತ್ತದೇ ೨೫ ಸುರಂಗಗಳನ್ನು ತೂರಿಕೊಂಡು, ಚುಮು ಚುಮು ಮಳೆಗೆ ಹಿತವಾಗಿ, ನಗ್ನವಾಗಿ ಬಿದ್ದು ಕೊಂಡಿದ್ದ ಬೆಟ್ಟಗಳ ಸಾಲನ್ನೂ, ಒದ್ದೆಯಾದ ರಸ್ತೆಗಳ ಮೇಲೆ ವಾಹನಗಳು ಹೊರಡಿಸುವ ಕಾರಂಜಿ ಗಳನ್ನು ನೋಡುತ್ತಾ ಘಾಟಿ ಇಳಿದು ಒಂದ್ಹತ್ತು ಕಿ ಮೀ ದೂರ ಬರುತ್ತಿದ್ದಂತೆಯೇ ಮತ್ತದೇ ಫಲಕ ಕಾಣಿಸಿತು “ಧೀ ಐನ್”. ಈ ಸ್ಥಳ ಎಡಕ್ಕೆ ಎನ್ನುವ ನಿರ್ದೇಶನ ಕಂಡಿದ್ದೇ ಕುತೂಹಲದಿಂದ ಗಾಡಿಯನ್ನು ರಹ ದಾರಿಯಿಂದ ಚಿಕ್ಕ ಕಡಿದಾದ ರಸ್ತೆಗೆ ನಡೆಸಿ ಸ್ವಲ್ಪ ಮುಂದೆ ಬರುತ್ತಿದ್ದಂತೆ ಧುತ್ತೆಂದು ಎದುರಾಯಿತು ಒಂದು ಬೆಟ್ಟ, ಅದರ ತುಂಬಾ ಶಿಥಿಲಗೊಂಡ ಮನೆಗಳು. ಇದೇನಪ್ಪಾ, “ಹರಪ್ಪಾ”, “ಮೊಹೆಂಜೋದಾರೋ” ತಲುಪಿ ಬಿಟ್ಟೆನಾ ಎಂದು ಕೌತುಕದಿಂದ ಹತ್ತಿರ ಬಂದಾಗ ಬೇಲಿ. ಅಲ್ಲಿಂದಲೇ ಒಂದು ಫೋಟೋ ಕ್ಲಿಕ್ಕಿಸಿದಾಗ ನನ್ನಾಕೆಗೆ ಇನ್ನೂ ಮುಂದಕ್ಕೆ ಹೋಗಿ ಅದೇನೆಂದು ನೋಡೋಣ ಎನ್ನುವ ಆಸೆ. ಮತ್ತಷ್ಟು ದೂರ ಹೋದಾಗ ಒಂದು ಟೋಲ್ ಗೇಟ್. ವಿಚಾರಿಸಿದಾಗ ಒಳ ಹೋಗಲು ತಲೆಗೆ ೧೦ ರಿಯಾಲ್ (೧೨೫ ರೂ) ಎಂದ. ಹಣ ತೆತ್ತು ಪಾಸ್ ಪಡೆದು ಹತ್ತಿರ ಹೋದಾಗ ಎಲ್ಲಾ ಹಳೆ ಕಾಲದ ಮನೆಗಳು, ಗುಡ್ಡದ ತುಂಬಾ ಅಚ್ಚುಕಟ್ಟಾಗಿ ಖಾಲಿ ಸಿಗರೆಟ್ ಪ್ಯಾಕ್ ಗಳನ್ನು ಜೋಡಿಸಿದಂತೆ ಕಾಣುತ್ತಿತ್ತು. ಅರ್ಧ ಗುಡ್ಡ ಹತ್ತಿ ಒಂದೇ ನಮೂನೆಯ ಮನೆಗಳನ್ನು ನೋಡುತ್ತಾ ಕೆಳಗಿಳಿದಾಗ ಝರಿಯ ಸಪ್ಪಳ. ಹಾಂ, ಮರಳುಗಾಡಿನಲ್ಲಿ ಝರಿಯೇ ಎಂದು ಹೋಗಿ ನೋಡಿದಾಗ ನನ್ನ ಕಣ್ಣುಗಳನ್ನು ನಂಬಲಾಗಲಿಲ್ಲ. ಚಿಕ್ಕದಾದರೂ ಅರೇಬಿಯಾದಲ್ಲಿ ಝರಿ, ಕಾಲುವೆ, ಕಾರಂಜಿಗಳು, ಅಪರೂಪವೇ. ಹಾಗಾಗಿ ಇದೊಂದು ರೀತಿಯ welcome change. ತಂಪಾದ ಝರಿಯ ನೀರನ್ನು ಮುಖಕ್ಕೆ ಸಿಂಪಡಿಸಿ ಕೊಂಡು ಝರಿಯ ಮತ್ತು ಈ ಬೆಟ್ಟದ ಮೇಲೆ ವಾಸವಿದ್ದವರ ಕುರಿತು ವಿಚಾರಿಸಿದೆ.

ಸುಮಾರು ೪೦೦ ವರ್ಷಗಳ ಹಿಂದೆ ಜನ ವಾಸವಿದ್ದ ಒಂದು ಹಳ್ಳಿ “ಥೀ ಐನ್”. ಇದರ ಅರ್ಥ “ಝರಿ ಇರುವ ಹಳ್ಳಿ” ಎಂದು. ಮತ್ತೊಂದು ಅರ್ಥ “ಒಕ್ಕಣ್ಣಿನ ಮನುಷ್ಯ” ಎಂದೂ ಇದೆ. ಇದರ ಹಿನ್ನೆಲೆ ಹೀಗಿದೆ ನೋಡಿ. ನೂರಾರು ವರ್ಷಗಳ ಹಿಂದೆ ಯೆಮನ್ ದೇಶದ ಮುದುಕನ ಹತ್ತಿರ ಮಾಂತ್ರಿಕ ದಂಡ ಇತ್ತಂತೆ, ಅಲ್ಲಾವುದ್ದೀನನ ಹತ್ತಿರ ಮಾಂತ್ರಿಕ ದೀಪ ಇದ್ದಂತೆ. ಅದನ್ನು ಉಪಯೋಗಿಸಿ ನೀರನ್ನು ಕಂಡು ಹಿಡಿಯಲು ಹಳ್ಳಿಯ ಜನ ಹೇಳಿದಾಗ ಆ ಮುದುಕ ತನ್ನ ದಂಡ ದಿಂದ ನೆಲಕ್ಕೆ ಬಡಿಯುತ್ತಾನೆ. ಕೂಡಲೇ ಚಿಮ್ಮುತ್ತದೆ ನೀರಿನ ಚಿಲುಮೆ. ನೀರೆನೋ ಚಿಮ್ಮಿತು, ಆದರೆ ಅದಕ್ಕೆ ಬೆಲೆಯನ್ನೂ ತೆತ್ತ ಪಾಪದ ಮುದುಕ; ನೆಲಕ್ಕೆ ಬಡಿದ ದಂಡ ಅವನ ಕಣ್ಣಿನ ಮೇಲೆ ಬಿದ್ದು  ತನ್ನ ಒಂದು ಕಣ್ಣನ್ನು ಕಳೆದು ಕೊಳ್ಳುತ್ತಾನೆ. ಜನರಿಗೆ ಉಪಕಾರ ಮಾಡಲು ಹೋಗಿ ಒಂದು ಕಣ್ಣನ್ನು ಕಳೆದುಕೊಂಡ ಯೆಮನ್ ದೇಶದ ವೃದ್ಧನ ಕತೆಯನ್ನು ಮೆಲುಕು ಹಾಕುತ್ತಾ ಜೆಡ್ಡಾ ಕಡೆ ಪ್ರಯಾಣ ಬೆಳೆಸಿದೆ.

ಪ್ರಯಾಣದ ವೇಳೆ ತೆಗೆದ ಕೆಲವು ಚಿತ್ರಗಳನ್ನು ಲಗತ್ತಿಸಿದ್ದೇನೆ. ನೋಡಿ, ಏನಾದರೂ ಅರ್ಥ ಆಗುತ್ತಾ ಅಂತ. ಏಕೆಂದರೆ ಹೇಳಿಕೊಳ್ಳುವಂಥದ್ದಲ್ಲದ ಕ್ಯಾಮರ ಮತ್ತು ಬೆನ್ನು ತಟ್ಟಿ ಕೊಳ್ಳುವಂಥ “ಕಲೆ”ಯಿಲ್ಲದೆ ತೆಗೆದ ಚಿತ್ರಗಳಿವು. ಇಂಥ ಚಿತ್ರಗಳನ್ನ ನೋಡಲು ಬಲವಂತ ಪಡಿಸಿದ್ದಕ್ಕೆ ಕ್ಷಮೆಯಿರಲಿ.